ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಥಾಯ್ಲೆಂಡ್ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ಇನ್ನು, ಪ್ರತ್ಯೇಕ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಜಾಲ ಬಯಲಾಗಿದ್ದು, ₹53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ವ್ಯಕ್ತಿಯೊಂದಿಗೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.








