ಬೆಂಗಳೂರು : ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಜೆಡಿಎಸ್ ನಿಯೋಗ ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿ, ಅಮಾನತುಗೊಳಿಸುವಂತೆ ಒತ್ತಾಯಿಸಿದೆ.
ಹೌದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತುಗೊಳಿಸಿ ಎಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರದಲ್ಲಿ ಎಂ.ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶ ಐ.ಪಿ.ಎಸ್ ಕೇಡರ್ಗೆ ಸೇರಿದವರಾಗಿದ್ದಾರೆ. ನಂತರ, ತನ್ನ ಪತ್ನಿಯ ಅನಾರೋಗ್ಯ ಮತ್ತು ಹಿಮಾಚಲ ಪ್ರದೇಶದ ವಾತಾವರಣ ಮತ್ತು ಹವಾಗುಣ ಹೊಂದುವುದಿಲ್ಲ ಎನ್ನುವ ಕುಂಟು ನೆಪ ಹೇಳಿ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಗೂ ರಾಜಕೀಯ ಪ್ರಭಾವ ಬೀರಿ ಕರ್ನಾಟಕ ರಾಜ್ಯಕ್ಕೆ ವರ್ಗಾವಣೆಗೊಂಡು, ತದನಂತರ ಕರ್ನಾಟಕ ಐ.ಪಿ.ಎಸ್ ಕೇಡರ್ನಲ್ಲಿ ವಿಲೀನಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಹಾಗಾಗಿ ಚಂದ್ರಶೇಖರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಲು ಅಗತ್ಯವಿರುವ ದಾಖಲಾತಿಗಳೊಂದಿಗೆ ಭಾರತೀಯ ಪೊಲೀಸ್ ಸೇವೆಗಳ ವೃಂದದ ಪ್ರಾಧಿಕಾರವಾಗಿರುವ ಕೇಂದ್ರ ಗೃಹ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಕಳುಹಿಸಬೇಕೆಂದು ಒತ್ತಾಯಿಸಿದ್ದಾರೆ.