ಕಲಬುರಗಿ : ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲೇ ಇದೆ. ರಣಬಿಸಿಲಿಗೆ ಜನತೆ ಪೂರ್ತಿಯಾಗಿ ತತ್ತರಿಸಿದ್ದು, ಇದೀಗ ಕಲಬುರಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ 46 ಡಿಗ್ರಿ ಸೇಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲ್ಬುರ್ಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಖೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಹವಾಮಾನ ಇಲಾಖೆ ನಾಲ್ಕು ದಿನಗಳ ಉಷ್ಣ ಮಾರುತದ ಆರೆಂಜ್ ಅಲರ್ಟ್ ಘೋಷಿಸಿದೆ.