ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸೋಮವಾರ ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇದರ ಮಧ್ಯ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸರ್ಕಾರ & ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರನ್ನು ದಾಖಲಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಅಕ್ರಮವಾಗಿ 14 ಸೈಟ್ ಹಂಚಿಕೆ ವಿಚಾರದ ಕುರಿತು ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮತ್ತೊಮ್ಮೆ ದೂರು ನೀಡಿದ್ದಾರೆ. 2023ರ ನ.03 ರಂದು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ವರದಿಯನ್ನು ಮುಚ್ಚಿಡಲಾಗಿದೆ ಎಂದು ನೇರವಾಗಿ ಸಿಎಂ ವಿರುದ್ಧ ಆರೋಪ ಮಾಡಿದ್ದಾರೆ. ಈ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರಿ ಅಧಿಕಾರಿಗಳು ಹಿಂಪಡೆದುಕೊಳ್ಳದೇ ಸುಮ್ಮನಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಮುಡಾ ಹಗರಣದ ಬಗ್ಗೆ ದೂರು ನೀಡಿದ ನಂತರ ರಾಜ್ಯಪಾಲರಿಗೆ ಸರ್ಕಾರದಿಂದ 2024ರ ಜುಲೈ27ರಂದು ರಾಜ್ಯಪಾಲರಿಗೆ ನೀಡಿರುವ ವರದಿಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಮುಚ್ಚಿಡಲಾಗಿದೆ. ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಕಾನೂನು ಬಾಹಿರ ಎಂದು ಉಲ್ಲೇಖಿಸಲಾಗಿದೆ. ಆದರೆ, ಈಗ ಹಿಂದಿನ ಮುಡಾ ಅಧ್ಯಕ್ಷ ದಿನೇಶ್ ಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಆದರೆ, ಅಕ್ರಮವಾಗಿ ನೀಡಿರುವ ಸೈಟ್ ಹಿಂಪಡೆಯದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಅಲ್ಲದೆ ಇದೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು.ವಿಚಾರಣೆಯ ವೇಳೆ ಸರ್ಕಾದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು. ಬಳಿಕ ದೂರುದರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾ. ಎಂ.ನಾಗಪ್ರಸನ್ನ ಅವರು, ಸೆಪ್ಟೆಂಬರ್ 12ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದರು. ಈ ಮೂಲಕ ಇನ್ನೆರಡು ದಿನ ಸಿಎಂ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಂತಾಗಿದೆ.