ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ತೀರ್ಪು ಪ್ರಕಟವಾಗಲಿದೆ. ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಮುಡಾ ಹಗರಣ CBI ತನಿಖೆಗೆ ವಹಿಸುವ ವಿಸ್ವಾಸವಿದೆ ಎಂದು ತಿಳಿಸಿದ್ದಾರೆ.
ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಸಿಬಿಐಗೆ ವಹಿಸಿ ತೀರ್ಪು ನೀಡುವ ವಿಶ್ವಾಸವಿದೆ. ಲೋಕಾಯುಕ್ತ ಅಧಿಕಾರಿಗಳು ಪ್ರಭಾವಕ್ಕೆ ಒಳಗಾಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸರಿಯಾಗಿ ವಿಚಾರಣೆ ಸಹ ಮಾಡಿಲ್ಲ. ಸಿದ್ದರಾಮಯ್ಯ ಹೇಳಿದ ಸಮಯಕ್ಕೆ ವಿಚಾರಣೆ ಮುಗಿಸಿದ್ದಾರೆ ಎಂದು ಅವರು ತಿಳಿಸಿದರು.
ಕೇಸ್ ನಲ್ಲಿ ಯಾರನ್ನು ಸಹ ವಶಕ್ಕೆ ಪಡೆದಿಲ್ಲ ಮತ್ತು ಬಂಧಿಸಿಲ್ಲ. ಇದೆಲ್ಲಾ ಪರಿಗಣಿಸಿ ಸಿಬಿಐಗೆ ವಹಿಸಲಿದೆ ಅನ್ನುವ ವಿಶ್ವಾಸವಿದೆ. ವ್ಯತಿರಿಕ್ತವಾಗಿ ತೀರ್ಪು ಬಂದರೆ ಸುಪ್ರೀಂ ಕೋರ್ಟ್ ನಲ್ಲಿ ಹೋರಾಟ ಮಾಡುತ್ತೇನೆ. ಲೋಕಾಯುಕ್ತ ಅಧಿಕಾರಿಗಳ ವಿರುದ್ಧವು ಕಾನೂನು ಹೋರಾಟ ಮುಂದುವರಿಸಲಾಗುತ್ತದೆ ಎಂದು ತಿಳಿಸಿದರು.
ಇಂದು ತೀರ್ಪು ಪ್ರಕಟ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು ಹಾಗಾಗಿ ಇಂದು ಧಾರವಾಡ ಪೀಠ ಆದೇಶ ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.