ಬೆಂಗಳೂರು : ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ (47) ಅವರನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ಮನೋಜ್ ಕುಮಾರ್ ಅವರಿಗೆ ಪರಿಚಿತನಾಗಿದ್ದ ರಾಜೇಶ್ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್ ಒತ್ತಡ ಹೇರಿದ್ದರು.
ಆಗಸ್ಟ್ 26ರಂದು ಸಂಜೆ 6.30ಕ್ಕೆ ಹಣ ಕೊಡುವುದಾಗಿ ರಾಜಾಜಿನಗರದ ಮೋದಿ ಆಸ್ಪತ್ರೆ ಸರ್ಕಲ್‌ಗೆ ಮನೋಜ್ ಕುಮಾರ್ ಅವರನ್ನು ರಾಜೇಶ್ ಕರೆಸಿಕೊಂಡಿದ್ದ. ಬಳಿಕ ದೊಡ್ಡವರು ಹಣ ಕೊಡುತ್ತಾರೆ ಎಂದು ಕಾರಿಗೆ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದ. ಮಾರ್ಗ ಮಧ್ಯೆ ಮನೋಜ್ ಕುಮಾರ್ ಅವರನ್ನು ಮತ್ತೊಂದು ಕಾರಿನಲ್ಲಿ ಕೂರಿಸಿಕೊಂಡು ಆರೋಪಿಗಳು ಅಪಹರಿಸಿದ್ದರು.
ನಗರದ ವಿವಿಧೆಡೆ ಸುತ್ತಾಡಿಸಿದ ಬಳಿಕ ಡ್ಯಾಗರ್ ತೋರಿಸಿ, ಬೆದರಿಸಿ ಮನೋಜ್ ಅವರ ಎರಡು ಖಾತೆಗಳಿಂದ ಒಟ್ಟು 2.96 ಲಕ್ಷ ರೂಪಾಯಿ ವರ್ಗಾಯಿಸಿಕೊಂಡಿದ್ದರು. ನಂತರವೂ 10 ಲಕ್ಷ ರೂ. ಕೊಡುವಂತೆ ಬೆದರಿಸಿದ್ದರು. ಹಣ ನೀಡುವುದಾಗಿ ಮನೋಜ್ ಕುಮಾರ್ ಒಪ್ಪಿಕೊಂಡ ಬಳಿಕ ಮಾರನೇ ದಿನ ಮಧ್ಯಾಹ್ನ ಅವರನ್ನ ಜ್ಞಾನಭಾರತಿ ಕ್ಯಾಂಪಸ್ ಬಳಿ ಕಾರಿನಿಂದ ಇಳಿಸಿ ಹೊರಟು ಹೋಗಿದ್ದಾರೆ ಎಂದು ಮನೋಜ್ ಕುಮಾರ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು.
ಕಳೆದ ಆಗಸ್ಟ್‌ನಲ್ಲಿ ರಾಜೇಶ್, ಸೀನಾ ಅಲಿಯಾಸ್ ಬಾಂಬೆ ಸೀನಾ, ಲೋಕೇಶ್ ಕುಮಾರ್, ನವೀನ್ ಕುಮಾರ್, ಸೋಮಯ್ಯ ಮತ್ತು ಯುಕೇಶ್ ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.








