ಬೆಂಗಳೂರು: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಕಾಲೇಜುಗಳನ್ನು ಬಲವರ್ಧನೆಗೊಳಿಸುವ ಉದ್ದೇಶವನ್ನು ಸರ್ಕಾರವು ಹೊಂದಿರುವುದರಿಂದ ಕಲಘಟಗಿ ತಾಲ್ಲೂಕಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಪ್ರಾರಂಭಿಸುವುದಿಲ್ಲ ಎಂದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ತಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.
ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಸಿ.ಎಂ. ನಿಂಬಣ್ಣವರ್ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಲಘಟಗಿ ಮತಕ್ಷೇತ್ರದ ಸಮೀಪದಲ್ಲಿರುವ ಹುಬ್ಬಳ್ಳಿಯಲ್ಲಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರಾರಂಭಿಸಲಾಗಿದೆ. ಸದರಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಇತರೆ ಸರ್ಕಾರಿ ಪಾಲಿಟೆಕ್ನಿಕ್ಗಳ ಒಟ್ಟು ಪ್ರವೇಶಾತಿಯಲ್ಲಿ ಶೇ. 30ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಮೀಸಲಾತಿ ಕಲ್ಪಿಸಿರುವುದರ ಜೊತೆಗೆ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ವಸತಿ ನಿಲಯವನ್ನು ಕಲ್ಪಿಸಲಾಗಿದೆ ಎಂದರು.