ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರಿನ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸುತ್ತಾರೆ. ಹೀಗಾಗಿ, ಬಂಧನಕ್ಕೆ ಅವಕಾಶ ನೀಡಬಾರದು. ಇದೆಲ್ಲವೂ ರಾಜಕೀಯ ಪ್ರೇರಿತ ಪ್ರಕರಣ ಎಂದರು.
ಇದಕ್ಕೆ ಆಕ್ಷೇಪಿಸಿದ್ದ ಸಂತ್ರಸ್ತೆ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯವು ಮುನಿರತ್ನ ಮತ್ತು ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಕಸ್ಟಡಿಗೆ ತನಿಖೆ ನಡೆಸಬೇಕಾದ ಅಗತ್ಯವಿದೆ. ಮುನಿರತ್ನ ವಿರುದ್ಧ 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಹೀಗಾಗಿ, ರಕ್ಷಣೆ ನೀಡಬಾರದು ಎಂದು ವಾದ ಮಂಡಿಸಿದರು.