ಬೆಂಗಳೂರು : ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಕಲ್ಪಿಸುವ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಸೂದೆ 2025ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಇದೀಗ ಅಧಿಸೂಚನೆ ಹೊರಡಿಸಿದೆ.
ಈ ಸುಗ್ರೀವಾಜ್ಞೆಯಿಂದ ಪ್ಲಾಟ್‌ಫಾರ್ಮ್ ಆಧಾರಿತ ಸೇವೆಗಳಾದ ಸ್ವಿಗ್ಗಿ, ಜೊಮಾಟೊಗಳಲ್ಲಿ ಫುಡ್ ಡೆಲವರಿ ಮಾಡುವ, ರೈಡ್ ಶೇರಿಂಗ್ ಸೇವೆಗಳಾದ ಓಲಾ, ಉಬರ್, ರ್‍ಯಾಪಿಡೋ ಯಾತ್ರಿ ಇತ್ಯಾದಿ ಅಪ್ಲಿಕೇಷನ್ ಆಧಾರಿತ ಚಾಲಕರು, ಇ–ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಬಿಗ್ ಬಾಸ್ಕೆಟ್ ಮತ್ತಿತ್ತರ ಕ್ಷೇತ್ರಗಳಲ್ಲಿ ಪೂರ್ಣಕಾಲಿಕ ಅಥವಾ ಅರೆಕಾಲಿಕ ಡೆಲವರಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಕಾರ್ಮಿಕ ಕಾನೂನುಗಳಡಿ ಲಭ್ಯವಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲಿದ್ದಾರೆ.
ಕೌನ್ಸೆಲಿಂಗ್ ಮೂಲಕ ವೈದ್ಯಾಧಿಕಾರಿಗಳ ವರ್ಗಾವಣೆ:
ಕೌನ್ಸಿಲಿಂಗ್ ಮೂಲಕ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ ತಿದ್ದುಪಡಿ ಮಸೂದೆ 2025ಕ್ಕೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಇದೆ ಪ್ರಕಾರ ವೈದ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಯ ಶೇ. 15ರಷ್ಟು ವರ್ಗಾವಣೆ ಮಾಡಲು ಅವಕಾಶ ಇದೆ.
ಗ್ರಾಮೀಣ ಪ್ರದೇಶದಲ್ಲಿ ನಿಗದಿಪಡಿಸಿದಷ್ಟು ಕರ್ತವ್ಯವನ್ನು ಸಲ್ಲಿಸದ ವೈದ್ಯಾಧಿಕಾರಿ ಅಥವಾ ಸಿಬ್ಬಂದಿಯನ್ನು ಗ್ರಾಮೀಣ ಪ್ರದೇಶಗಳಲ್ಲಿರುವ ಹುದ್ದೆಗೇ ವರ್ಗಾವಣೆ ಮಾಡಬೇಕು. ವಿಶೇಷ ತಜ್ಞ ವೈದ್ಯರು, ಹಿರಿಯ ವಿಶೇಷ ತಜ್ಞ ವೈದ್ಯರನ್ನು ಅವರು ಹೊಂದಿರುವ ವಿಶೇಷ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಗುರುತಿಸಿದ ಹುದ್ದೆಗೆ ವರ್ಗಾವಣೆ ಮಾಡಬೇಕು
ಕಡ್ಡಾಯ ಗ್ರಾಮೀಣ ಸೇವೆ ಸಡಿಲಗೊಳಿಸುವ ಸುಗ್ರೀವಾಜ್ಞೆ:
ಗ್ರಾಮೀಣ ಸೇವೆ ಸಡಿಲಗೊಳಿಸುವ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ಮಸೂದೆ 2025ಕ್ಕೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಎಂಬಿಬಿಎಸ್ ವೈದ್ಯರ ಗ್ರಾಮೀಣ ಸೇವೆ ಕಡ್ಡಾಯ ನಿಯಮ ಸಡಿಲಗೊಳಿಸಿ ನಗರ ಪ್ರದೇಶದಲ್ಲಿಯೂ ಸೇವೆ ಸಲ್ಲಿಸಲು ಅನುಕೂಲ ಮಾಡಿಕೊಡುವ ಸುಗ್ರೀವಾಜ್ಞೆ ಇದಾಗಿದೆ. ಗ್ರಾಮೀಣ ಭಾಗದಲ್ಲಿ 1500ಕ್ಕೂ ಹೆಚ್ಚು ಹುದ್ದೆಗಳಲ್ಲಿ ಮಾತ್ರ ಸೇವೆ ಸಲ್ಲಿಸಲು ಅವಕಾಶ ಇರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಸೇವೆ ಕಡ್ಡಾಯವನ್ನು ಸಡಿಲಗೊಳಿಸಿ ನಗರ ಪ್ರದೇಶಕ್ಕೂ ಅವಕಾಶ ಕಲ್ಪಿಸಲಾಗಿದೆ.