ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗುವುದರ ಜೊತೆಗೆ, ‘ಕರ್ತವ್ಯ’ (KARTAVYA – KAAMS) ಮೊಬೈಲ್ ಆ್ಯಪ್ ಮೂಲಕವೇ ದಿನನಿತ್ಯದ ಹಾಜರಾತಿಯನ್ನು ದಾಖಲಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಜೂನ್ 4, 2026 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಈ ಮೊಬೈಲ್ ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿಕೊಂಡು ತಮ್ಮ ಹಾಜರಾತಿಯನ್ನು ದಾಖಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
2.13 ಲಕ್ಷಕ್ಕೂ ಹೆಚ್ಚು ನೌಕರರು ಇನ್ನೂ ನೋಂದಾಯಿಸಿಲ್ಲ!
ಜೂನ್ 16, 2026 ರವರೆಗಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಇನ್ನೂ 2,13,925 ಅಧಿಕಾರಿಗಳು ಮತ್ತು ನೌಕರರು ‘ಕರ್ತವ್ಯ’ ಮೊಬೈಲ್ ಆ್ಯಪ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ ಎಂಬ ವಿಷಯ ಬಹಿರಂಗವಾಗಿದೆ. ಈ ನಡೆಗೆ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಯವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ವೈಯಕ್ತಿಕವಾಗಿ ಗಮನಹರಿಸುವಂತೆ ಸೂಚಿಸಿದ್ದಾರೆ. ಆಯಾ ಜಿಲ್ಲೆಗಳಲ್ಲಿ ಇದುವರೆಗೆ ಆ್ಯಪ್ನಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲು ಆದೇಶಿಸಲಾಗಿದೆ. ಅಷ್ಟೇ ಅಲ್ಲದೆ, ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಮುಂದಿನ 7 ದಿನಗಳ ಒಳಗಾಗಿ ಕಡ್ಡಾಯವಾಗಿ ವರದಿ ಸಲ್ಲಿಸಬೇಕು ಎಂದು ಜೂನ್ 17ರಂದು ಹೊರಡಿಸಿರುವ ಅಧಿಕೃತ ಟಿಪ್ಪಣಿಯಲ್ಲಿ ಸೂಚಿಸಲಾಗಿದೆ.









