ಕಲಬುರಗಿ: ರಾಜ್ಯದ ಕಾಂಗ್ರೆಸ್ ಸರ್ಕಾರವು ಮತ್ತೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆಯೇ ಎಂಬ ಬಲವಾದ ಅನುಮಾನ ಹಾಗೂ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಗುರುವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಲಾಡ್ಲೆ ಮಶಾಕ್ ದರ್ಗಾ ಗಲಾಟೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಲಿಖಿತ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದಾಗಿ ಗಲಾಟೆಯಲ್ಲಿ ಭಾಗಿಯಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಪ್ರಮುಖ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಕಳೆದ 2022ರ ಮಹಾಶಿವರಾತ್ರಿಯ ಸಂದರ್ಭದಲ್ಲಿ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಪೂಜೆ ನೆರವೇರಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಭಾರಿ ಸಂಘರ್ಷ ಏರ್ಪಟ್ಟಿತ್ತು. ಕೆಲವು ಕಿಡಿಗೇಡಿಗಳು ಪವಿತ್ರ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂಬ ಆರೋಪ ಕೇಳಿಬಂದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಈ ಘಟನೆಯು ಇಡೀ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿ, ಕೋಮು ಸೌಹಾರ್ದತೆಗೆ ಧಕ್ಕೆ ತಂದಿತ್ತು.
ಶಿವಲಿಂಗ ಅಪವಿತ್ರಗೊಂಡ ವಿಷಯ ತಿಳಿಯುತ್ತಿದ್ದಂತೆ, ಸ್ಥಳವನ್ನು ಸ್ವಚ್ಛಗೊಳಿಸಿ ಪೂಜೆ ನೆರವೇರಿಸಲು ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಮುಂದಾಗಿದ್ದರು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳಕ್ಕೆ ಧಾವಿಸಿದ್ದ ಅಂದಿನ ಜಿಲ್ಲಾಧಿಕಾರಿ (DC) ಮತ್ತು ಪೊಲೀಸ್ ವರಿಷ್ಠಾಧಿಕಾರಿ (SP) ಅವರ ವಾಹನಗಳ ಮೇಲೆಯೇ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿತ್ತು. ಬಡಿಗೆಗಳಿಂದ ಕಾರುಗಳನ್ನು ಜಖಂಗೊಳಿಸಿ, ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಲಾಗಿತ್ತು.
ಈ ಮಾರಣಾಂತಿಕ ದಾಳಿ ಮತ್ತು ದಗಾಡ್ದಿ ಸೃಷ್ಟಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಂದು ಪೊಲೀಸರು ವಿವಿಧ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ಒಟ್ಟು 13 ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದರು. ಆದರೆ, ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಎಲ್ಲಾ 13 ಪ್ರಕರಣಗಳನ್ನು ಸಂಪೂರ್ಣವಾಗಿ ಹಿಂಪಡೆದುಕೊಂಡಿದೆ. ಸರ್ಕಾರದ ಈ ದಿಢೀರ್ ಕ್ರಮದ ವಿರುದ್ಧ ರಾಜ್ಯಾದ್ಯಂತ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಕಾನೂನು ಕೈಗೆತ್ತಿಕೊಂಡವರನ್ನು ರಕ್ಷಿಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.








