ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಅಬ್ಬರದ ಡಿಜೆ ಸೌಂಡ್ ಸಿಸ್ಟಮ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಟ್ರಾಕ್ಟರ್‌ಗಳಲ್ಲಿ ದೊಡ್ಡ ಮಟ್ಟದ ಶಬ್ದ ಮಾಡುವ ಧ್ವನಿವರ್ಧಕಗಳನ್ನು ಅಳವಡಿಸಿ, ಅಶ್ಲೀಲ ಹಾಡುಗಳನ್ನು ಹಾಕಲಾಗುತ್ತಿದೆ. ಇದರಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರರಾದ ಶ್ರೀನಿವಾಸಗೌಡ ಬಾ. ಪಾಟೀಲ ಅವರು ನೀಡಿದ್ದ ದೂರಿಗೆ ಸ್ಪಂದಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಆದೇಶದಲ್ಲಿ ಏನಿದೆ?
ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಪುಷ್ಪ ವಿ.ಎಸ್. ಅವರು ಹೊರಡಿಸಿರುವ ಆದೇಶದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ಅತಿಯಾದ ಶಬ್ದ ಮಾಲಿನ್ಯದಿಂದ ಶಾಲಾ ಮಕ್ಕಳು, ಹಸುಗೂಸುಗಳು, ಹಿರಿಯ ನಾಗರಿಕರು ಮತ್ತು ಗರ್ಭಿಣಿಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಅಕ್ರಮ ಅಳವಡಿಕೆ: ಕಾನೂನು ಬಾಹಿರವಾಗಿ ವಾಹನಗಳಲ್ಲಿ ಡಿಜೆ ಸೌಂಡ್ ಬಾಕ್ಸ್‌ಗಳನ್ನು ಅಳವಡಿಸಿರುವುದು ನಿಯಮಬಾಹಿರವಾಗಿದೆ.
ತ್ವರಿತ ಕ್ರಮಕ್ಕೆ ಸೂಚನೆ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (RTA) ಸಭೆಗಳಲ್ಲಿ ಈ ಬಗ್ಗೆ ಚರ್ಚಿಸಿ, ಅಕ್ರಮ ಧ್ವನಿವರ್ಧಕಗಳನ್ನು ತಕ್ಷಣವೇ ತೆರವುಗೊಳಿಸಲು ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.









