ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸಲು ಒಂದು ತಿಂಗಳ ಕಾಲಾವಕಾಶ ನೀಡಿದರೂ ಸೂಕ್ತ ಕ್ರಮಕ್ಕೆ ಮುಂದಾಗದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಮಾತೃ ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು.
ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿರ್ಬಂಧ ವಿಧಿಸಿದ್ದು, ಪ್ರಯಾಣಿಕರು ಬಳಸಲು ಅನುಮತಿ ನೀಡಿಲ್ಲ. ಕೇವಲ ಡೆಲಿವರಿಗಾಗಿ ಬಳಸಲು ಅವಕಾಶ ನೀಡಲಾಗಿದೆ. ಡೆಲಿವರಿಗಾಗಿ ಟ್ಯಾಕ್ಸಿ ಎಂದು ನೋಂದಣಿ ಮಾಡಿಸುವ ಅಗತ್ಯವಿಲ್ಲ. ಈ ಸಂಬಂಧ ನೀತಿ ರೂಪಿಸಿದ್ದೇವೆ ಎಂದು ತಿಳಿಸಿದರು.
ಪ್ರಕರಣದ ಹಿನ್ನೆಲೆ
ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ (ಎಲ್ಲೋ ಬೋರ್ಡ್) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗ್ರೇಟರ್ ಸಂಸ್ಥೆಗಳು ಹೈಕೋರ್ಟ್ನ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದವು.