ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ, ಕದನ ನಡೆಯುತ್ತಿದ್ದರ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಒಂದು ವಾರದ ಬಳಿಕ ಮತ್ತೆ ಐಪಿಎಲ್ ಆರಂಭವಾಗಿದ್ದು, ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.
ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲು ಪಾರ್ಕಿಂಗ್ ನಿಷೇಧಿಸಲಾಗಿದ್ದು, ಇಂದು ವೀಕೆಂಡ್ ಇರುವುದರಿಂದ ಹಾಗೂ ಆರ್‌ಸಿಬಿ ಮತ್ತು ಕೆಕೆಆರ್ ಪಂದ್ಯ ಇರುವುದರಿಂದ ಈ ಭಾಗದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಆಗಿದೆ. ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಈಗಾಗಲೇ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು ಸುಮಾರು 1000 ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ಪಂದ್ಯ ನಡೆಯೋದೆ ಡೌಟ್?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಹಲವು ಕಾರಣಗಳಿಗೆ ಸಾಕಷ್ಟು ಮಹತ್ವದ್ದೆನಿಸಿಕೊಂಡಿದೆ. ಆದರೆ ಇವತ್ತಿನ ಮ್ಯಾಚ್ ನಡಿಯೋದೇ ಡೌಟ್ ಎನ್ನುವಂತಹ ಮಾತುಗಳು ಕೇಳಿ ಬರಲಾರಂಭಿಸಿವೆ.
ಹೌದು ಆರ್‌ಸಿಬಿ ಹಾಗೂ ಕೆಕೆಆರ್ ಹೀಗೆ ಎರಡು ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿರುವ ಈ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿದ್ದು, ಇಂದಿನ ಪಂದ್ಯ ನಡೆಯೋದೇ ಡೌಟ್ ಎನ್ನುವಂತಹ ಮಾತುಗಳು ಕೇಳಿ ಬರಲಾರಂಭಿಸಿವೆ. ಯಾಕೆಂದರೆ ಇಂದು ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುವ ಭೀತಿ ಎದುರಾಗಿದೆ.