ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವುದರಿಂದ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದು, ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ, ನೂತನ ಸರ್ಕಾರ, ಸಂಪುಟ ರಚನೆಯ ಪ್ರಕ್ರಿಯೆಯ ಭಾಗವಾಗಿ ಶಾಸಕಾಂಗ ಸಭೆಯು ನಡೆಯಲ್ಲಿದ್ದು, ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತಿದೆ. ಬಳಿಕ ಸರ್ಕಾರ ರಚನೆ ಹಕ್ಕು ಮಂಡಿಸಲಾಗುವುದು. ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ತನ್ನ ಶಾಸಕರಿಗೆ ಸೂಚನೆ ನೀಡಿದೆ.ಸಂಪುಟ ವಿಸರ್ಜನೆ ಹಿನ್ನೆಲೆಯಲ್ಲಿ, ಮಾಜಿ ಸಚಿವರುಗಳು ಸರ್ಕಾರಿ ಕಾರುಗಳನ್ನು ವಾಪಸ್ ಮಾಡಿದ್ದು, ತಮ್ಮ ಖಾಸಗಿ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದಾರೆ.
ಇನ್ನು ನಾಳೆ ನಡೆಯುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರು ಘೋಷಣೆ ಆಗುವ ಸಾಧ್ಯತೆ ಇದೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಸಹ ಪ್ರಮಾಣ ವಚನ ಸ್ವೀಕಾರಕ್ಕೆ ಭರದ ಸಿದ್ಧತೆ ನಡೆಸಿದ್ದು ಖ್ಯಾತ ಜ್ಯೋತಿಷಿ ದ್ವಾರಕನಾಥ ಬಳಿ ಮುಹೂರ್ತಕ್ಕೆ ದಿನಾಂಕ ನಿಗದಿ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ಸಹ ತಿಳಿದು ಬಂದಿದೆ






