ನವದೆಹಲಿ : ರಾಜ್ಯ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ದೆಹಲಿಗೆ ಭೇಟಿ ನೀಡಿದ್ದು, ದೆಹಲಿಯ ಕರ್ನಾಟಕ ಭವನದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಹಾಗೂ ಸಚಿವ ಕೆ ಎನ್ ರಾಜಣ್ಣ ಒಟ್ಟಿಗೆ ಉಪಹಾರ ಸೇವಿಸಿದರು. ಬಳಿಕ ಹೈಕಮಾಂಡ್ ಅವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಲು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದು, ಮನವಿಗೆ ಸ್ಪಂದಿಸಿದ ಅವರು ಅನುದಾನ ನೀಡಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಪಕ್ಷದ ಬೆಳವಣಿಗೆ ಕುರಿತು ಮಾಹಿತಿ ನೀಡಿದ್ದೇನೆ. ಅಲ್ಲದೆ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ಮಾಡಿದ್ದೇನೆ.ತೆರವಾಗಲಿರುವ ವಿಧಾನ ಪರಿಷತ್ ಸದಸ್ಯರ ಆಯ್ಕೆ ವಿಚಾರ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದರು.
ಇನ್ನು ನಮ್ಮ ಜಿಲ್ಲೆ ಅಭಿವೃದ್ಧಿ ವಿಚಾರವಾಗಿ ದೆಹಲಿಗೆ ಭೇಟಿ ನೀಡಿದ್ದೇನೆ. ಈ ವೇಳೆ ಕೇಂದ್ರ ಸಚಿವರು ಹಾಗೂ ನಮ್ಮ ನಾಯಕರನ್ನು ಭೇಟಿಯಾಗಿದ್ದೇನೆ. ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿಯಾಗಿ ಅನುದಾನಕ್ಕೆ ಮನವಿ ಮಾಡಿದ್ದೇನೆ. ಅನುದಾನ ನೀಡಲು ಒಪ್ಪಿಗೆ ನೀಡಿದ್ದಕ್ಕೆ ಸೋಮಣ್ಣ ಅವರಿಗೆ ಧನ್ಯವಾದಗಳು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.
ಇನ್ನು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಸಹಕಾರ ಇಲಾಖೆ ಸಂಬಂಧ ಅನುದಾನ ಬರಬೇಕಿದೆ. 5,600 ಕೋಟಿ ಅನುದಾನ ನೀಡುವ ನಿರೀಕ್ಷೆ ಇತ್ತು ಆದರೆ ಅದು ಆಗಿಲ್ಲ. ನಿರೀಕ್ಷೆಗಿಂತ ಕಡಿಮೆ ಹಣ ಬಂದಿದ್ದರಿಂದ ರೈತರಿಗೆ ಸಮಸ್ಯೆ ಆಗಿದೆ. ಈ ವಿಚಾರದ ಕುರಿತು ಅಮಿತ್ ಶಾ ಗೆ ಮನವರಿಕೆ ಮಾಡಲು ಬಂದಿದ್ದೆ ಆದರೆ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಎಂದು ಸಹಕಾರ ಇಲಾಖೆ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.