ಬೆಂಗಳೂರು : ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆ. 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.
ರಾಜ್ಯ ಸರ್ಕಾರದ ವತಿಯಿಂದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರದ ರಜೆಯನ್ನು ಮಂಜೂರು ಮಾಡಿರುವುದರಿಂದ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ. ಸೆ. 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದರು.








