ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವೈ. ಭರತ್ ಶೆಟ್ಟಿ ಅವರ ವಿರುದ್ದದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಭರತ್ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ಶಾಸಕ ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪ್ರಕರಣದ ವಿಚಾರಣೆ ತಡೆ ನೀಡಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ
ಜುಲೈ 8ರ ಬೆಳಗ್ಗೆ ಕಾವೂರು ಜಂಕ್ಷನ್‌ನಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರಹಾಕಬೇಕು, ಅವನು ಮಾತನಾಡುವ ಶೈಲಿ ನೋಡಿದರೆ ಹಿಂದೂ ಆದ ನಾನು ಲೋಕಸಭೆಗೆ ಹೋಗಿ ಅವರ ಕೆನ್ನೆಗೆ ಎರಡು ಹೊಡೆಯಬೇಕು ಎನಿಸುತ್ತದೆ.
ಆಗ ಮಾತ್ರ ಆತನಿಗೆ ಬುದ್ದಿ ಬರುವುದು. ನಾನೊಬ್ಬ ಹಿಂದೂವಾಗಿದ್ದು, ಯಾರಾದರೂ ಹಿಂದೂ ವಿಚಾರದಲ್ಲಿ ಮಾತನಾಡಿದರೆ ಅವರಿಗೆ ತಕ್ಕ ಬುದ್ದಿ ಕಲಿಸಲು ನಾವೆಲ್ಲಾ ಒಂದಾಗಬೇಕು. ಅಗತ್ಯಬಿದ್ದರೆ ಶಸ್ತ್ರಾಸ್ತ್ರ ಹಿಡಿದು ಹೋರಾಟ ಮಾಡಲು ನಾವೆಲ್ಲಾ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.
ಈ ಸಂಬಂಧ ಮಂಗಳೂರಿನ ಅನಿಲ್ ಕುಮಾರ್ ಎಂಬುವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದರು. ಇದರ ಸಂಬಂಧ ಭರತ್ ಶೆಟ್ಟಿ ಮತ್ತಿತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದೇ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿತ್ತು.