ಆರೋಗ್ಯದ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳನ್ನು ಮುಂದುವರಿಸಿ ದರ್ಶನ್ ಅವರು ಸುಪ್ರೀಂ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಈ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದೆ. ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕೋರ್ಟ್, ಒಂದು ವರ್ಷದ ಬಳಿಕ ಬೇಕಿದ್ದರೆ ದರ್ಶನ್ ಅವರು ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಸುಪ್ರೀಂ ಕೋರ್ಟ್‌ನ ಈ ಮಹತ್ವದ ಆದೇಶದಿಂದಾಗಿ ದರ್ಶನ್ ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.
ಪ್ರಕರಣದ ಹಿನ್ನೆಲೆ: 2024ರ ಜೂನ್ 11ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್, ತೀವ್ರ ಬೆನ್ನು ನೋವಿನ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಆರೋಗ್ಯದ ಆಧಾರದ ಮೇಲೆ 2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಆದರೆ, ಹೈಕೋರ್ಟ್ ನೀಡಿದ್ದ ಜಾಮೀನಿನಲ್ಲಿ ತಾಂತ್ರಿಕ ಹಾಗೂ ಕಾನೂನಾತ್ಮಕ ಲೋಪಗಳಿವೆ ಎಂದು ಅಭಿಪ್ರಾಯಪಟ್ಟಿದ್ದ ಸುಪ್ರೀಂ ಕೋರ್ಟ್, 2025ರ ಆಗಸ್ಟ್‌ನಲ್ಲಿ ದರ್ಶನ್ ಅವರ ಜಾಮೀನನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಅವರು ಮತ್ತೆ ಜೈಲು ಪಾಲಾಗಬೇಕಾಯಿತು. ಈ ನಡುವೆ ಜೈಲಿನಲ್ಲಿ ವಿಐಪಿ ಆತಿಥ್ಯ ಪಡೆದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜೈಲಿಗೂ ಶಿಫ್ಟ್ ಮಾಡಲಾಗಿತ್ತು, ತದನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕರೆತರಲಾಗಿತ್ತು.
ಸದ್ಯದ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಪ್ರಕರಣದ ತನಿಖೆ ಮತ್ತು ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೆ ಅಂದರೆ ಇನ್ನು ಒಂದು ವರ್ಷಗಳ ಕಾಲ ದರ್ಶನ್ ಜೈಲಿನಲ್ಲೇ ಉಳಿಯಲಿದ್ದಾರೆ