ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿಯವರೆಗೆ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ಸಿಬ್ಬಂದಿಗಳಿಗೆ ಸರ್ಕಾರ ಶಾಕ್ ನೀಡಿದೆ. ಅದೇ ಅಂತವರ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರವು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದೆ.
ಈ ಸಂಬಂಧ ಕಂದಾಯ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯದಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಟ್ಟಿ ನೀಡುವಂತೆ ತಿಳಿಸಿದೆ.
ಇದಷ್ಟೇ ಅಲ್ಲದೇ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸುತ್ತಿರುವಂತ ಸಿಬ್ಬಂದಿಗಳ ವರ್ಗಾವಣೆ ಅಗತ್ಯವಿದ್ದರೇ, ಅದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನೂ ಸಲ್ಲಿಸುವಂತೆ ಸೂಚಿಸಿದೆ.
ಅಂದಹಾಗೇ ಒಂದೇ ಸ್ಥಳದಲ್ಲಿ ದೀರ್ಘಾವಧಿಯವರೆಗೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನಲೆಯಲ್ಲಿ ಈ ಕಂದಾಯ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಕಳೆದ ಜುಲೈ.8ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಓಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಒಂದೇ ಹುದ್ದೆ, ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿಗೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳ ಬಗ್ಗೆಯೂ ಪ್ರಸ್ತಾಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅಂತವರ ಪಟ್ಟಿ ಸಲ್ಲಿಸುವಂತೆ ಸುತ್ತೋಲೆಯನ್ನು ಹೊರಡಿಸಲಾಗಿದೆ.