ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಆಂಧ್ರಪ್ರದೇಶದಲ್ಲಿ 12 ಮಂದಿ, ತೆಲಂಗಾಣದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಮತ್ತು ರೈಲ್ವೆ ಸಂಚಾರಕ್ಕೆ ಅಡ್ಡಿಯಾಗಿದೆ.
ಎರಡೂ ರಾಜ್ಯಗಳಲ್ಲಿ, ನದಿಗಳು ಉಕ್ಕಿ ಹರಿಯುತ್ತಿವೆ ಮತ್ತು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳು ಸಾವಿರಾರು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಿವೆ. ಉಭಯ ರಾಜ್ಯಗಳ ಹಲವಾರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.
ತೆಲಂಗಾಣ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮಾತನಾಡಿ, ರಾಜ್ಯದಾದ್ಯಂತ ಮಳೆ ಸಂಬಂಧಿತ ಘಟನೆಗಳಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಸೂರ್ಯಪೇಟ್, ಭದ್ರಾದ್ರಿ ಕೊಥಗುಡೆಮ್, ಮಹಬೂಬಾಬಾದ್ ಮತ್ತು ಖಮ್ಮಮ್ನಲ್ಲಿ ಸ್ಥಳೀಯ ಆಡಳಿತಗಳು ಹಲವಾರು ಪ್ರವಾಹ ಪೀಡಿತ ಗ್ರಾಮಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿವೆ.” ಎಂದಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾನುವಾರ ತುರ್ತು ಪರಿಶೀಲನಾ ಸಭೆ ನಡೆಸಿದರು. ಏತನ್ಮಧ್ಯೆ, ಹೈದರಾಬಾದ್ನಲ್ಲಿಯೂ ಭಾರಿ ಮಳೆಯಾಗಿದ್ದು, ನಗರದ ಅನೇಕ ಭಾಗಗಳು ಜಲಾವೃತಗೊಂಡಿವೆ