ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಬೆಂಗಳೂರಿಗೆ ಬರುವ ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ ಎನ್ನಲಾಗಿದೆ.
ಮೇ 15ರಂದು ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ವಾಪಾಸ್ ಆಗಲು ಲುಫಾನ್ಸಾ ವಿಮಾನಯಾನ ಸಂಸ್ಥೆಯ ವಿಮಾನ ಟಿಕೆಟ್ ಅನ್ನು ಬುಕ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇಂದು ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮಧ್ಯಾಹ್ನ 2 ಗಂಟೆಗೆ ಜರ್ಮನಿಯಿಂದ ವಿಮಾನ ಹೊರಡಲಿದ್ದು, ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಇದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಪ್ರಜ್ವಲ್ ಭಾರತಕ್ಕೆ ವಾಪಾಸ್ ಆಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.