ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ಸಿದ್ದರಾಮೋತ್ಸವ ಯಶಸ್ಸಿನ ಬಳಿಕ ಇದೀಗ ರಥಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ರಾಜ್ಯದಿಂದ ತೆರಳಿದ ಬಳಿಕ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ ಮೂಲಗಳು ತಿಳಿಸಿವೆ.
ರಥಯಾತ್ರೆ ಮೂಲಕ ಸಿದ್ದರಾಮಯ್ಯ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಠಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.