ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿನ ಬಳಿಕ ಇದೀಗ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ಎರಡನೇ ವಾರದಲ್ಲಿ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ ಮೂಲಗಳು ತಿಳಿಸಿವೆ.
ರಥಯಾತ್ರೆ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಠಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ನವೆಂಬರ್ 2 ನೇ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಎರಡು ಪ್ರತ್ಯೇಕ ತಂಡಗಳು ರಾಜ್ಯ ಪ್ರವಾಸ ಹೊರಡಲಿದ್ದು, ಪ್ರತಿ ತಂಡದಲ್ಲಿ 15 ಮುಂಚೂಣಿ ನಾಯಕರು ಇರಲಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ನೇತೃತ್ವದ ತಂಡವು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದೆ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ 15 ನಾಯಕರ ತಂಡವು ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದೆ. ಪ್ರತಿದಿನ 2 ಕ್ಷೇತ್ರಗಳಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಮಾಡಲು ಸಿದ್ಧತೆ ನಡೆಸಲಾಗಿದೆ.