ಬೆಂಗಳೂರು : ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಜನಸಂದಣಿ, ಒಳಾಂಗಣ, ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸಬೇಕು. ಕೊರೊನಾ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದರೆ, ರಾಜ್ಯ ಸರ್ಕಾರವು ಇಂದು ಉನ್ನತ ಮಟ್ಟದ ಸಭೆ ಕರೆದಿದೆ. ಸಭೆಯ ನಂತರ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ. ಬೆಂಗಳೂರಿ ನಗರಕ್ಕೆ ಪ್ರತ್ಯೇಕ ನಿಯಮ ಹಾಗೂ ಉಳಿದ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.