ಬೆಂಗಳೂರು : ಕಂದಾಯ ಸಚಿವ ಆರ್.ಅಶೋಕ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಅತಿದೊಡ್ಡ ಹಗರಣದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದ ಬೆನ್ನಲ್ಲೇ ಈ ಭೇಟಿ ತೀವ್ರ ಚರ್ಚೆಗೆ ಕಾರಣವಾಗಿದೆ.
ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ನಾನು ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಭೇಟಿ ನೀಡಿದ್ದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ. ಯಾವುದೇ ಹಗರಣಗಳನ್ನು ಬಿಡುಗಡೆ ಮಾಡಲು ಅಥವಾ ಚರ್ಚಿಸಲು ಕುಮಾರಸ್ವಾಮಿ ಸ್ವತಂತ್ರರಾಗಿದ್ದಾರೆ ಮತ್ತು ನಾನು ಅಂತಹ ಯಾವುದೇ ಅಕ್ರಮದಲ್ಲಿ ಭಾಗಿಯಾಗದ ಕಾರಣ ಅದರ ಬಗ್ಗೆ ನಾನು ಚಿಂತಿಸುವುದಿಲ್ಲ ಎಂದು ಅವರು ಹೇಳಿದರು.