ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಯ ಅಬ್ಬರಕ್ಕೆ ರಾಜ್ಯದಲ್ಲಿ ನಿನ್ನೆ ಮತ್ತೆ ನಾಲ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುದೂರು ಗ್ರಾಮದಲ್ಲಿ ಹೊಂಡಕ್ಕೆ ಬಿದ್ದು ಶಂಕರ್ ಬಿನ್ ಲಿಂಗಾನಾಯ್ಕ (53) ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಬಳಿ ಹಳ್ಳದಲ್ಲಿ ಟಿಪ್ಪುಸುಲ್ತಾನ ಅಕ್ಬರಸಾಬ ದೊಡ್ಡಮನಿ (28) ಎಂಬವರು ಬೈಕ್ ಸಮೇತ ಕೊಚ್ಚಿ ಹೋಗಿದ್ದಾರೆ. ಕುಮಟಾದ ಸುಮಾ ಎಂಬ ಮಹಿಳೆ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ರಾಜ ಕಾಲುವೆಯಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ.
ಇನ್ನೆರಡು ದಿನ ರಾಜ್ಯಾದ್ಯಂತ ಭಾರೀ ಮಳೆ
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ಘೋಷಣೆ
ಹಾವೇರಿ
ಹಾವೇರಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಹಾವೇರಿಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಶಾಲೆಗೆ ಹೋಗಲು ಮಕ್ಕಳಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಗದಗ
ಗದಗ ಜಿಲ್ಲೆಯಲ್ಲೂ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಕ್ಕಳು ಶಾಲೆಗೆ ಹೋಗಲು ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಇಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಿಜಯನಗರ ಜಿಲ್ಲೆ
ವಿಜಯನಗರ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ವಿಜಯನಗರ ಜಿಲ್ಲೆಯ ಕೊಟ್ಟೂರು, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಹಡಗಲಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದೂ ಕೂಡ ರಜೆ ಘೋಷಿಸಲಾಗಿದೆ.