ಚಿತ್ರದುರ್ಗ : ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದಾಗಿ ಸಂಭವಿಸಿದ ಬೆಳೆ ಹಾನಿಗೆ ಸಂಬಂಧಪಟ್ಟಂತೆ ಜಿಲ್ಲೆಯ ರೈತರಿಗೆ ರೂ. 223.30 ಕೋಟಿ ಬೆಳೆಹಾನಿ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
BIGG NEWS : ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ `ಒನಕೆ ಓಬವ್ವ ಜಯಂತಿ’ ಕಾರ್ಯಕ್ರಮ : ನಾಳೆ ಸಿಎಂ ಬೊಮ್ಮಾಯಿ ಉದ್ಘಾಟನೆ
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬೆಳೆಹಾನಿಗೆ ಸಂಬಂಧಪಟ್ಟಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ, ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ, ರೈತರಿಗೆ ಬೆಳೆಹಾನಿ ಪರಿಹಾರ ಹಣ ಬಿಡುಗಡೆ ಮಾಡಲು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ, ಇದರಿಂದಾಗಿ ರೈತರಿಗೆ ತ್ವರಿತವಾಗಿ ಪರಿಹಾರ ಪಾವತಿಸಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂಗಾರು ಹಂಗಾಮಿನಲ್ಲಿ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ಯೋಜನೆಯಲ್ಲಿ 1.60 ಲಕ್ಷ ರೈತರಿಗೆ 164.54 ಕೋಟಿ ರೂಪಾಯಿ ಪಾವತಿಯಾಗಿದೆ. ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ 27,488 ವಿದ್ಯಾರ್ಥಿಗಳಿಗೆ ರೂ.10.33 ಕೋಟಿ ಪಾವತಿಯಾಗಿದೆ. ರೈತ ಶಕ್ತಿ ಯೋಜನೆ ಸಂಬಂಧಪಟ್ಟಂತೆ ಜಿಲ್ಲೆಯ ರೈತರ ಪಟ್ಟಿಯನ್ನು ಕಳುಹಿಸಲಾಗಿದೆ. ರೈತರ ಇ-ಕೆವೈಸಿ ಮಾಡುವ ಪ್ರಕ್ರಿಯೆಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.
ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ ನೀಡಲು ತಾಕೀತು: ಜಿಲ್ಲೆಯ ಎಲ್ಲ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲೆಯಲ್ಲಿ ಹಾಸ್ಟೆಲ್ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಸರ್ಕಾರ ಮಕ್ಕಳಿಗೆ ಉತ್ತಮ ಆಹಾರ ಮತ್ತು ಸೌಲಭ್ಯ ಒದಗಿಸಲು ಕೋಟಿಗಟ್ಟಲೆ ಹಣ ಒದಗಿಸುತ್ತಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿರುಚಿಯಾದ ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಎಂದು ಹೇಳಿದರು.
ಹಾಸ್ಟೆಲ್ ಮೇಲುಸ್ತುವಾರಿ ನಿರ್ವಹಣೆ ವಿಫಲಕ್ಕೆ ಅಧಿಕಾರಿಗಳೇ ಹೊಣೆ: ಹಾಸ್ಟೆಲ್ ಮೇಲುಸ್ತುವಾರಿ ನಿರ್ವಹಣೆಯಲ್ಲಿ ವಿಫಲರಾಗುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಎಚ್ಚರಿಕೆ ನೀಡಿದರು.
ಚೆಗೆ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯಲ್ಲಿ ಹಿಂದುಳಿದ ವರ್ಗಗಳ ಹಾಸ್ಟೆಲ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಾಸ್ಟೆಲ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಹಾಸ್ಟೆಲ್ಗಳಿಗೆ ಆಕಸ್ಮಿಕ ಭೇಟಿ ನೀಡಲಾಗುವುದು, ಈ ವೇಳೆ ಹಾಸ್ಟೆಲ್ ನಿರ್ವಹಣೆಯಲ್ಲಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಎಫ್.ಐ.ಆರ್ ಮಾಡಿಸಿ, ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ ಅವರು, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಕ್ರೈಸ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಸತಿ ನಿಲಯಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪರಿಶೀಲನಾ ವರದಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಒಗೆ ಕಳುಹಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯ ತಲುಪುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಆರ್.ಓ. ಘಟಕದಲ್ಲಿ ಸಹಾಯವಾಣಿ ಮಾಹಿತಿ ಫಲಕ ಹಾಕಿ: ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಬಂದಾಗ ಸಮಸ್ಯೆಗೆ ಪರಿಹಾರ ಕೈಗೊಳ್ಳಲು, ಅಧಿಕಾರಿಗಳಿಗೆ ಮಾಹಿತಿ ನೀಡಲು ದೂರವಾಣಿ ವಿವರವುಳ್ಳ ಸಹಾಯವಾಣಿಯ ಮಾಹಿತಿ ಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಗ್ರಾಮೀಣ ಮತ್ತು ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರ್.ಓ.ಘಟಕ ದುರಸ್ತಿಗೆ ಬಂದಾಗ 24 ಗಂಟೆಯೊಳಗೆ ದುರಸ್ತಿ ಕಾರ್ಯಕೈಗೊಂಡು ಜನರಿಗೆ ಕುಡಿಯುವ ನೀರು ಒದಗಿಸಬೇಕು ಎಂದರು.
ಚರ್ಮಗಂಟು ರೋಗ ಪರಿಹಾರ ನೀಡಿ: ಚರ್ಮಗಂಟು ರೋಗದಿಂದಾಗಿ ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಮರಣ ಹೊಂದಿದ ಹಸು, ಕರುಗಳ ಮಾಲೀಕರಿಗೆ ಪರಿಹಾರ ನೀಡುವಂತೆ ತಾಕೀತು ಮಾಡಿದರು. ರಾಗಿ ಖರೀದಿಯಲ್ಲಿ ನಿಯಮ ಪಾಲನೆಯಾಗಲಿ: ಜಿಲ್ಲೆಯಲ್ಲಿ ಈಗಾಗಲೇ ರಾಗಿ ಖರೀದಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ರಾಗಿ ಖರೀದಿಯಲ್ಲಿ ಕಡ್ಡಾಯವಾಗಿ ನಿಯಮ ಪಾಲನೆಯಾಗಬೇಕು ಎಂದು ಸಚಿವರು ಸೂಚನೆ ನೀಡಿದರು. ಯಾವುದೇ ಕಾರಣಕ್ಕೂ ವ್ಯಪಾರಸ್ಥರಿಂದ ರಾಗಿ ಖರೀದಿ ಮಾಡಬಾರದು. ಪ್ರೂಟ್ ಐಡಿ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ರಾಗಿ ಖರೀದಿಸಬೇಕು ಎಂದು ಹೇಳಿದರು.
ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಜಾಗೃತಿ ಮೂಡಿಸಿ: ಸರ್ಕಾರವು ಅಂಗನವಾಡಿ ಮೂಲಕ ಗರ್ಭೀಣಿಯರಿಗೆ ಪೌಷ್ಠಿಕ ಆಹಾರ ನೀಡುತ್ತಿದ್ದು, ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. ಗರ್ಭಿಣಿಯರು ಹಾಗೂ ಬಾಣಂತಿಯರು ಅಂಗನವಾಡಿಗೆ ಆಗಮಿಸಿ, ಪೌಷ್ಠಿಕ ಆಹಾರ ಸೇವಿಸುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.