ಬೆಂಗಳೂರು : ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರೆ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು,ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗಸ್ತು ಹೆಚ್ಚಿಸುವುದೂ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಕ್ಕಾಗಿ ಕೇಂದ್ರ ಸರ್ಕಾರದಿಂದ ಆದೇಶ ಬಂದಿದೆ. ಶೀಘ್ರದಲ್ಲಿಯೇ ಈ ಸಂಬಂಧ ಕರ್ನಾಟಕ ಸರ್ಕಾರದ ಆದೇಶವೂ ಬರುತ್ತದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಕದಡುವ ಕೆಲಸ ಅಗಬಾರದು ಎಂದು ಹೇಳಿದರು.
ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.
ಕೆಲ ದಿನಗಳ ಹಿಂದೆ ದೇಶಧ 15 ರಾಜ್ಯಗಳಲ್ಲಿ ಪಿಎಫ್ ಐ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿ ನೂರಾರು ಕಾರ್ಯಕರ್ತರನ್ನು ಬಂಧಿಸಿದ್ದು, ಈ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್ ಐ ಅನ್ನು ದೇಶದಲ್ಲಿ 5 ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.