ಬೆಂಗಳೂರು : 1 ರಿಂದ 8 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 1 ರಿಂದ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲಾಗಿಲ್ಲ. ಇದು ಸಂಪೂರ್ಣ ರಾಜ್ಯ ವಲಯದ ಯೋಜನೆಯಾಗಿದ್ದು, ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವದಲ್ಲಿ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವೇ ಶೇ. 100 ರಷ್ಟು ವಿದ್ಯಾರ್ಥಿ ವೇತನ ನೀಡುತ್ತಿದೆ. ಆದರೆ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶೇ. 60 ರಷ್ಟು ಕೇಂದ್ರ ಸರ್ಕಾರ ಹಾಗೂ ಶೇ. 40 ರಷ್ಟು ರಾಜ್ಯ ಸರ್ಕಾರದ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಯಾವುದೇ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿಲ್ಲ ಎಂದು ಹೇಳಿದ್ದಾರೆ.

Share.
Exit mobile version