ಬೆಂಗಳೂರು: ರಾಜ್ಯ ಸರ್ಕಾರವು ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ. ಅದಕ್ಕೆ ನಾವೇ ಗ್ಯಾರಂಟಿ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಸ್ಪಷ್ಟಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರದಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58,000 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯ ಸರ್ಕಾರವು ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ 26 ಲಕ್ಷ ರೈತರ ಖಾತೆಗೆ 2000 ರೂ. ನಂತೆ ಬರ ಪರಿಹಾರ ಹಣ ವರ್ಗಾವಣೆ ಮಾಡಲಾಗಿದೆ. ಇನ್ನುಳಿದ 3 ರಿಂದ 4 ಲಕ್ಷ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಲಾಗುವುದು ಮತ್ತು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ತಕ್ಷಣ ಕೇಂದ್ರದಿಂದ ಶೇ.88 ರಷ್ಟು ಅನುದಾನ ಮತ್ತು ರಾಜ್ಯ ಸರ್ಕಾರದಿಂದ ಶೇ.12 ರಷ್ಟು ಅನುದಾನ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು. ಈ ಭಾಗದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲೆಯಲ್ಲಿ ಅಪೇರಲ್ ಪಾರ್ಕ್, ಜೀನ್ಸ್ ಪಾರ್ಕ್ ನಿರ್ಮಾಣ ಕುರಿತು, ಮಾನ್ಯ ಮುಖ್ಯಮಂತ್ರಿಗಳಿಗೆ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ ಸೇರಿದಂತೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.