ಪಾಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ಯುಗ ಆರಂಭವಾಗುತ್ತಿದೆ. ದಶಕಗಳ ಕಾಲ ಜೆಡಿಯು (JD-U) ನಾಯಕ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿದ್ದ ಎನ್‌ಡಿಎ ಸರ್ಕಾರದಲ್ಲಿ, ಈಗ ಮೊದಲ ಬಾರಿಗೆ ಭಾರತೀಯ ಜನತಾ ಪಾರ್ಟಿ (BJP) ಮುಖ್ಯಮಂತ್ರಿ ಗಾದಿಯನ್ನು ಅಲಂಕರಿಸಲಿದೆ. ಇಂದು (ಏಪ್ರಿಲ್ 14, 2026) ನಡೆಯಲಿರುವ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ತಮ್ಮ ಕೊನೆಯ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯ ನಂತರ ಅವರು ರಾಜ್ಯಪಾಲರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ನಿತೀಶ್ ಅವರು ಈಗಾಗಲೇ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ದೆಹಲಿ ರಾಜಕಾರಣಕ್ಕೆ ತೆರಳಲಿದ್ದಾರೆ.
ಹೊಸ ನಾಯಕನ ಆಯ್ಕೆ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ವೀಕ್ಷಕರನ್ನಾಗಿ ನೇಮಿಸಿದೆ. ಅವರು ಇಂದು ಪಾಟ್ನಾಗೆ ಆಗಮಿಸಿ ಶಾಸಕರ ಸಭೆ ನಡೆಸಲಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ, ಈಗಿನ ಉಪಮುಖ್ಯಮಂತ್ರಿ ಸಮ್ರಾಟ್ ಚೌಧರಿ ಅವರು ಮುಖ್ಯಮಂತ್ರಿ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ಜೊತೆಗೆ ದಲಿತ ನಾಯಕ ಲಖೇಂದ್ರ ಕುಮಾರ್ ರೌಶನ್ ಅವರ ಹೆಸರೂ ಕೇಳಿಬರುತ್ತಿದೆ.








