ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ 2 ದಿನಗಳ ಕಾಲ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದೀಗ ಪುತ್ರನ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ಇದೀಗ ಜನಪ್ರತಿನಿಧಿಗಳ ಕೋರ್ಟ್ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.
ಪ್ರಕರಣ ಹಿನ್ನೆಲೆ?
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸದ್ಯ ನ್ಯಾಯಾಂಗ ಬಂಧನಲ್ಲಿರುವ ವಿನಯ್ ಕುಲಕರ್ಣಿ ಅವರು ತಮ್ಮ ಮಗನ ಶಸ್ತ್ರಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಿದರು. ಬಳಿಕ ನ್ಯಾಯಾಲಯವು ಸಿಬಿಐಗೆ ನೋಟಿಸ್ ಜಾರಿಗೊಳಿಸಿ ಮಂಗಳವಾರಕ್ಕೆ (ಸೆ.೯) ವಿಚಾರಣೆಯನ್ನು ಮುಂದೂಡಿತು.
ಏನಿದು ಪ್ರಕರಣ?
ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ೨೦೧೬ರ ಜೂ.೧೫ರಂದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ೨೦೨೦ರ ನ.೫ರಂದು ಸಿಬಿಐ ಬಂಧಿಸಿತ್ತು. ಬಳಿಕ ವಿನಯ್ ಕುಲಕರ್ಣಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದರು.
ಈ ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಕಳೆದ ಜೂನ್ ೬ರಂದು ಜಾಮೀನು ರದ್ದುಗೊಳಿಸಿ, ಒಂದು ವಾರದೊಳಗೆ ನ್ಯಾಯಾಲಯ ಎದುರು ಶರಣಾಗುವಂತೆ ಸೂಚಿಸಿತ್ತು. ಅದರಂತೆ ವಿನಯ್ ಕುಲಕರ್ಣಿ ಜೂ.೧೪ರಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಶರಣಾಗಿದ್ದರು. ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.a