ಬೆಂಗಳೂರು: ನಗರದ ದೊಮ್ಮಲೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಮರ್ ಅವರ ಪುಸ್ತಕ ಕುರಿತಾದ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಹೈಡ್ರಾಮಾ ನಡೆದಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ದೊಮ್ಮಲೂರಿನಲ್ಲಿ ಹೈಡ್ರಾಮಾ
ದೊಮ್ಮಲೂರಿನಲ್ಲಿರುವ ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC) ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕಾರ್ಯಕ್ರಮದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದ್ದಾರೆ.
ಗಣ್ಯರ ಭಾಗಿ, ಪೊಲೀಸ್ ಬಂದೋಬಸ್ತ್
ಸಂಜೆ 6 ಗಂಟೆಗೆ ನಿಗದಿಯಾಗಿರುವ ಈ ಕಾರ್ಯಕ್ರಮದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ಹಾಗೂ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿಯಾಗದಂತೆ ಬಿಐಸಿ ಕೇಂದ್ರದ ಸುತ್ತಮುತ್ತ ಬಿಗುವಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಸದ್ಯ ಬಿಐಸಿ ಆವರಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.








