ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ವೇಳೆ ‘ಮತ ಕಳ್ಳತನ’ ಮಾಡಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಗಸ್ಟ್ 5ರಂದು ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪಕ್ಷದ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಪ್ರತಿಭಟನೆಯ ನಂತರ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಿದೆ.
“ಅವರು (ಕಾಂಗ್ರೆಸ್) ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ. ಅವರು ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ. ಅಕ್ರಮಗಳು ನಡೆದಿದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಹೇಗೆ ಬಂತು? ಅವರು ಎಲ್ಲಾ ಮೂರು ಉಪಚುನಾವಣೆಗಳನ್ನು ಹೇಗೆ ಗೆದ್ದರು? ಹತಾಶೆಯಿಂದ ರಾಹುಲ್ ಮೋಸದ ನಾಟಕವಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.