ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುವ ಮುನ್ನ ಮಾತನಾಡಿದ ವಿಜಯೇಂದ್ರ, ರಾಜ್ಯದ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಜೆಡಿಎಸ್ ಜೊತೆ ಸೀಟು ಹಂಚಿಕೆ ಅಂತಿಮಗೊಳಿಸಿದ ನಂತರ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗುವುದು. “ನಮ್ಮ ಪಕ್ಷದ ಹೈಕಮಾಂಡ್ ಹೆಸರುಗಳನ್ನು ಅಂತಿಮಗೊಳಿಸುತ್ತದೆಯೇ ಹೊರತು ನಾವಲ್ಲ” ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಪ್ರತಿನಿಧಿಸುವ ಬೆಳಗಾವಿ ಕ್ಷೇತ್ರದಲ್ಲಿ ತಮ್ಮದೇ ಪಕ್ಷದ ಕೆಲವು ನಾಯಕರು ‘ಗೋ ಬ್ಯಾಕ್ ಶೆಟ್ಟರ್’ ಅಭಿಯಾನವನ್ನು ಪ್ರಾರಂಭಿಸಿದ್ದರೂ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯಲು ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ ಅವರನ್ನೊಳಗೊಂಡ ನಿಯೋಗವು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಡಾ.ರಾಧಾಮೋಹನ ದಾಸ್ ಅಗರವಾಲ್ ಅವರನ್ನು ಭೇಟಿ ಮಾಡಿತು