ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ನಿನ್ನೆ ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು.
ಈ ಹಿನ್ನೆಲೆ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಇನ್ನೂ. ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆ ಪ್ರಯಾಣಿಕರು ಪರದಾಡಿದ್ದಾರೆ. ಮಹಾಪುಂಡರ ಪುಂಡಾಟಿಕೆ ಖಂಡಿಸಿ ಕರವೇ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿ ಎಂಇಎಸ್ ಹಾಗೂ ಶಿವಸೇನೆ ಪುಂಡರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಗಡಿ ವಿವಾದದ ಕುರಿತು ಸಿಎಂಗೆ ಕರವೇ ಪತ್ರ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಲಾಗುತ್ತಿದೆ. ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ. ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ .