ಬೆಂಗಳೂರು : ನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ದುರ್ಮರಣಕ್ಕೀಡಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಬೆಂಗಳೂರು ನಗರದಾದ್ಯಂತ ಇರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸುಸ್ಥಿತಿ ಹಾಗೂ ಸುರಕ್ಷತೆಯ ಬಗ್ಗೆ ತಕ್ಷಣವೇ ಸಮಗ್ರ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ವಿಕ್ಟೋರಿಯಾ ಆಸ್ಪತ್ರೆ ಕೆ ಸಿ ಜನರಲ್ ಆಸ್ಪತ್ರೆ ಸಿವಿ ರಾಮನ್ ನಗರ ಆಸ್ಪತ್ರೆ ಸರ್ಕಾರಿ ಆಸ್ಪತ್ರೆ ಕಾಂಪೌಂಡ್ ಸೇರಿದಂತೆ ಕಟ್ಟಡಗಳ ಕ್ವಾಲಿಟಿ ಚೆಕ್ಕಗೆ ಸಚಿವ ಡಾಕ್ಟರ್ ಶರಣ ಪ್ರಕಾಶ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಹಳೆಯದಾದ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಗುರುತಿಸಿ, ಮುಂದಾಗಬಹುದಾದ ಇಂತಹ ಅನಾಹುತಗಳನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಈ ತಪಾಸಣಾ ಕಾರ್ಯದ ವರದಿಯನ್ನು ಶೀಘ್ರವಾಗಿ ಸಲ್ಲಿಸಬೇಕು ಮತ್ತು ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಒಂದು ವಾರದೊಳಗೆ ಎಲ್ಲಾ ಆಸ್ಪತ್ರೆಗಳ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.








