ಮೈಸೂರು : ಬೆಳಗಾವಿಯಿಂದ ಮೈಸೂರಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದ, ಕೆ ಎಸ್ ಆರ್ ಟಿ ಸಿ ಬಸ್ ಒಂದು ನಿನ್ನೆ ಮೈಸೂರಿನಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ 11 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಮಕ್ಕಳನ್ನು ಕೆ.ಆರ್.ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ಅಜಾಗರೂಕತೆಯಿಂದ ಡಿವೈಡರ್ಗೆ ಡಿಕ್ಕಿಯಾಗಿ ಬಸ್ ಮಗುಚಿ ಬಿದ್ದಿದೆ. ಬಸ್ನಲ್ಲಿದ್ದ 36 ಮಕ್ಕಳ ಪೈಕಿ 11 ಮಕ್ಕಳು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.