ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಳವಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ 13 ವರ್ಷದ ಬಾಲಕ ಪ್ರೇಮ್ ಕುಮಾರ್ ಚಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕಳೆದ ಒಂದು ವಾರದಿಂದ ಪ್ರೇಮ್ ಕುಮಾರ್ ಜ್ವರದಿಂದ ಬಳಲುತ್ತಿದ್ದ. ಬಳಿಕ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರೇಮ್ ಕುಮಾರ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್ ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದರೊಂದಿಗೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಘಿ ಬಾರದಂತೆ ಜಾಗ್ರತೆ ವಹಿಸಿ. ಡೆಂಘಿ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷಿಸದಿರಿ. ಕೂಡಲೇ ಆಸ್ಪತ್ರೆಗೆ ತೆರಳಿ ಡೆಂಘಿ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಪಡೆಯಿರಿ.