ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ. ಕಘೋಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪ್ರಯಾಣಿಕರ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಬಸ್ ವೇಗವಾಗಿ ಚಲಿಸುತ್ತಿದ್ದದ್ದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.








