ಬೆಂಗಳೂರು :ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ, ಇದೀಗ ಜೈಲಿನ ಸೂಪರಿಂಟೆಂಡೆಂಟ್‌ಗೆ (ಎಸ್ಪಿ) ವಿಶೇಷ ಪತ್ರವೊಂದನ್ನು ಬರೆದಿದ್ದಾರೆ. ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಜೈಲಿನ ಒಳಗಡೆ ಭೇಟಿ ಮಾಡಲು (ಒಳ ಸಂದರ್ಶನ) ವಿಶೇಷ ಅವಕಾಶ ಕಲ್ಪಿಸಿಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕಾನೂನು ಹೋರಾಟದಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಕುಟುಂಬದವರನ್ನು ಖುದ್ದಾಗಿ ಭೇಟಿಯಾಗಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲು ದರ್ಶನ್ ಬಯಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 15 ರಂದು ಅವರು ಕಾರಾಗೃಹದ ಮುಖ್ಯ ಅಧೀಕ್ಷಕರಾದ ಅಂಶು ಕುಮಾರ್ ಅವರಿಗೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.
ಜೈಲಿನ ನಿಯಮಾವಳಿಗಳ ಪ್ರಕಾರ ಸಾಮಾನ್ಯ ಸಂದರ್ಶನದ ಅವಧಿಯಲ್ಲಿ ಭೇಟಿಯಾಗುವ ಬದಲು, ಜೈಲಿನ ಒಳಗಿರುವ ಪ್ರತ್ಯೇಕ ಕೊಠಡಿಯಲ್ಲಿ ಪತ್ನಿ ಮತ್ತು ಮಗನನ್ನು ಒಂಟಿಯಾಗಿ ಭೇಟಿ ಮಾಡಲು ದರ್ಶನ್ ಅನುಮತಿ ಕೋರಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮೇ 16 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ದರ್ಶನ್ ಅವರ ಈ ವಿಶೇಷ ಮನವಿಗೆ ಜೈಲು ಆಡಳಿತ ಮಂಡಳಿ ಇನ್ನು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಕೈದಿಗಳ ಭೇಟಿಗೆ ಸಂಬಂಧಿಸಿದಂತೆ ಜೈಲಿನ ನಿಯಮಾವಳಿಗಳು ಕಟ್ಟುನಿಟ್ಟಾಗಿದ್ದು, ಕೊಠಡಿಯ ಒಳಗೆ ಪ್ರತ್ಯೇಕ ಭೇಟಿಗೆ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಕಾರಾಗೃಹದ ಹಿರಿಯ ಅಧಿಕಾರಿಗಳು ಇಂದು ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.








