ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಐಷರಾಮಿ ಬೈಕ್ ಶೋರೂಂಗೆ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್ ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.