ದಾವಣಗೆರೆ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣ ನಡೆದಿತ್ತು. ಇದೀಗ ದಾವಣಗೆರೆಯಲ್ಲಿ ಕೂಡ ಸರ್ಕಾರಿ ಶಾಲೆಯಲ್ಲಿ ಬಾಲಕಿಯರಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣ ಬೆಳಕಿಗೆ ಬಂದಿದೆ.
ದಾವಣಗೆರೆ ತಾಲೂಕಿನ ಮಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬಹಿರಂಗವಾಗಿದ್ದು, ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತಕ್ಕೂ ಅಧಿಕ ಬಾಲಕಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
ಶಾಲಾ ಮಕ್ಕಳು ಶೌಚಾಲಯ ಸ್ವಚ್ಛ ಮಾಡುವ ವಿಡಿಯೋ ಇದೀಗ ವೈರಲ್ ಆಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇತ್ತೀಚಿಗೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ.
ನಂತರ ಕಲ್ಬುರ್ಗಿಯಲ್ಲಿ ಕೂಡ ಹಿರೇ ಪ್ರಕರಣ ಬೆಳಕಿಗೆ ಬಂದಿದ್ದು, ಶಾಲಾ ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯ ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಿದ್ದರು. ಈ ಹಿನೆಲೆಯಲ್ಲಿ ಅವರ ಮೇಲೆ FIR ಕೂಡ ದಾಖಲಾಗಿತ್ತು. ಕಲಬುರಗಿಯ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಜೋಹರ್ ಜಬೀನ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದರು.