ಚಿಕ್ಕಬಳ್ಳಾಪುರ: ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗಿಳಿಸಿ ಸ್ವಚ್ಛತಾ ಕಾರ್ಯಕ್ಕೆ ಬಳಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾ ಲಯ ಸ್ವಚ್ಛತೆಗೆ ಮಕ್ಕಳನ್ನು ಬಳಸಿದ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಬೆನ್ನಲ್ಲೇ ಶಾಲೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಭಾರಿ ಮುಖ್ಯ ಶಿಕ್ಷಕಿ ಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯದ ಸ್ವಚ್ಛತೆ ಮಾಡಿಸದಂತೆ ಸರ್ಕಾರದ ಸ್ಪಷ್ಟ ಆದೇಶವಿದೆ. ಇಷ್ಟಾದರೂ ಈ ಶಾಲೆಯಲ್ಲಿ ಹೆಣ್ಣುಮಕ್ಕಳಿಬ್ಬರ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವುದನ್ನು ಕಂಡು ಸಾರ್ವಜನಿಕರು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಇದರ ಬೆನ್ನಲ್ಲೇ ಶಿಡ್ಲಘಟ್ಟ ತಾಪಂ ಇಒ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪೋಷಕರು ಹಾಗೂ ಗ್ರಾಮಸ್ಥರು ಶಿಕ್ಷಕಿಯ ಕಾಠ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
ಅಲ್ಲದೆ ಇತ್ತೀಚಿಗೆ ಕಲಬುರ್ಗಿಯಲ್ಲು ಕೂಡ ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವ ಘಟನೆ ನಡೆದಿತ್ತು. ಅಲ್ಲದೆ ಮನೆಯ ಕೆಲಸವನ್ನು ಕೂಡ ಮಾಡಿಸಿಕೊಂಡಿದ್ದಾರೆ ಎಂದು ಪೋಷಕರು ಇದೆ ವೇಳೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿಯನ್ನ ಅಮಾನತು ಮಾಡಲಾಗಿತ್ತು.