ಹುಬ್ಬಳ್ಳಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಭುಗಿಲೆದ್ದಿದೆ.
ರಾಜ್ಯದ ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯವರೆಗೆ ತೆರಳಿ, ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಕಚೇರಿ ಬಳಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆದಿದ್ದು, ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದ ಬೆನ್ನಲ್ಲೇ ಪೊಲೀಸರು ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.








