ಬೆಂಗಳೂರು :ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದ. ಈ ಒಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಚಿನ ತನಿಖೆಗಾಗಿ ಸಿಐಡಿ ಗೆ ಈ ಒಂದು ಪ್ರಕರಣ ವರ್ಗಾವಣೆ ಮಾಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಕಾವು ಹೆಚ್ಚಾಗುತ್ತಿದ್ದಂತೆ ಪ್ರತಿ ಪಕ್ಷಗಳು ಕೇಂದ್ರ ತನಿಖಾ ಸಂಸ್ಥೆಗಳಿಗೆ ಪ್ರಕರಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದವು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲ ಪ್ರಕರಣವನ್ನೂ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಿನ್ನೆ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದಲ್ಲಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹೊರತುಪಡಿಸಿ ಉಳಿದ 25 ಆರೋಪಿಗಳಿಗೆ ಶುಕ್ರವಾರ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ 6 ಪ್ರಕರಣ ದಾಖಲಾಗಿವೆ.
ಪ್ರಕರಣ ಹಿನ್ನೆಲೆ?
ಬಳ್ಳಾರಿನ ಗಲಭೆ ಕೇಸ್ ಸಂಬಂಧ ಜ.5ರಂದು ಪ್ರಮುಖ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳನ್ನು ಪೊಲೀಸರು ಸ್ಥಳಾಂತರಿಸಿದ್ದರು.
ಗನ್‌ಮ್ಯಾನ್‌ಗಳಾದ ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ಹಾಗೂ ಮಹೇಂದ್ರ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ಕ್ರೈಮ್ ನಂಬರ್ 4ರಲ್ಲಿನ 25 ಬಂಧಿತ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.








