ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರಿಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರಿಂಕೋರ್ಟ್ ರದ್ದು ಮಾಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು.
ಆಸಿಡ್ ದಾಳಿ ಪ್ರಕರಣ: 3 ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ, ತಲಾ 4 ಲಕ್ಷ ಪರಿಹಾರ ಭರವಸೆ!
ಈ ವೇಳೆ ಕಂಪ್ಯೂಟರ್ ಹಾರ್ಡ್ಡಿಸ್ಕ್ ಹಾಗೂ 57 ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನೊಂದೆಡೆ, ಜಾರಿ ನಿರ್ದೇಶನಾಲಯವು (ಇಡಿ) ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿ.ಕೆ.ಶಿವಕುಮಾರ್ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಜೈಲಿಗೆ ಹೋಗಿ ಜಾಮೀನು ಮೇಲೆ ಬಿಡುಗಡೆಯಾಗಿ ಹೊರಬಂದಿದ್ದರು.