ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದೆ ಬಿಜೆಪಿಯ ಸಂಸದ ಕರಡಿ ಸಂಗಣ್ಣ ಅವರು ನಿನ್ನೆ ಸಂಸದ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ನಿನ್ನೆ ಸಂಸದ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ನೀಡಿದ್ದರು. ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ನಿನ್ನೆ ಸುದ್ದಿಗರರೊಂದಿಗೆ ಮಾತನಾಡಿದ ಅವರು ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ರಾಜೀನಾಮೆ ನೀಡಿದ್ದೇನೆ. ಕಳೆದ 10 ವರ್ಷಗಳಿಂದ ಜನರ ಆಶೀರ್ವಾದದಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ. ನಾನು ಸಂಸದನಾಗುವ ಮೊದಲು ರೈಲ್ವೆ, ಹೆದ್ದಾರಿ ಹಾಗೂ ಕೇಂದ್ರ ಸರ್ಕಾರ ಸರ್ಕಾರದ ಯೋಜನೆಗಳು ಜನರಿಗೆ ನಿರೀಕ್ಷಿತ ಮಟ್ಟದಲ್ಲಿ ತಲುಪಿರಲಿಲ್ಲ. ನಾನು ಸಂಬಂಧಿಸಿದ ಕೇಂದ್ರ ಸಚಿವರನ್ನು ಸಂಪರ್ಕಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದಿದ್ದಾರೆ.
ಇತ್ತೀಚಿನ ರಾಜಕಾರಣ ನನಗೆ ಬೇಸರ ತರಿಸಿದ್ದು, ನನ್ನ ಸಾರ್ವಜನಿಕರ ಸೇವೆ ಗುರುತಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಕೊಪ್ಪಳದಲ್ಲಿ ಬಿಜೆಪಿ ನೆಲೆಯೂರಲು ನಾನು ಕೂಡ ಕಾರಣಿಕರ್ತ. ಪಕ್ಷದ ಪ್ರತಿಯೊಂದು ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದ್ದೇನೆ. ಹಾಲಿ, ಮಾಜಿ ಶಾಸಕರು, ಹಿರಿಯ ಹಾಗೂ ಕಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ನನ್ನ ಜತೆಗಿದ್ದೇ ಬೆನ್ನಿಗೆ ಚೂರಿ ಹಾಕಿದ ಮಹಾ ನಾಯಕರಿಗೆ ಕೊಪ್ಪಳದ ಜನರು ತಕ್ಕ ಶಾಸ್ತಿ ಮಾಡುತ್ತಾರೆ ಎಂದು ತಮ್ಮ ಬೇಸರ ಹೊರಹಾಕಿದ್ದಾರೆ.