ಬೆಂಗಳೂರು : ಬೆಂಗಳೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಬಗ್ಗೆ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಲಾಖೆಯ ವಿವಿಧೆಡೆ ಇರುವ 12 ಕಚೇರಿಗಳ ಮೇಲೆ ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಆದೇಶದ ಮೇರೆಗೆ, ಬೆಂಗಳೂರಿನ ಜಂಟಿನಿರ್ದೇಶಕರ(ಆಡಳಿತ) ಕಚೇರಿ, ಉಪ ನಿರ್ದೇಶಕರ (ಸಾರ್ವ ಜನಿಕ ಶಿಕ್ಷಣ ಇಲಾಖೆ) ಕಚೇರಿ ಹಾಗೂ 9ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳು ಸೇರಿದಂತೆ ಒಟ್ಟು 12 ಕಚೇರಿಗಳಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ದೂರುಗಳ ಸತ್ಯಾಸತ್ಯತೆ ಅರಿಯಲು ಲೋಕ್ತಾ ಅಧಿಕಾರಿಗಳು ಗೌಪ್ಯ ತನಿಖೆ ನಡೆಸಿದ್ದರು. ಈ ವೇಳೆ ಆರೋಪಗಳಲ್ಲಿ ಹುರುಳಿದೆ ಎಂದು ಖಚಿತವಾದ ಬಳಿಕ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖ ಲಿಸಿಕೊಂಡು ದಾಳಿ ನಡೆಸಲಾಗಿದೆ.
ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಮಾರ್ಗಸೂಚಿಗಳ ಉಲ್ಲಂಘನೆ ಮತ್ತು ಲಂಚಕ್ಕೆ ಬೇಡಿಕೆ. ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ ಖಾಸಗಿ ಶಾಲೆಗಳಿಗೆ ಅನಗತ್ಯ ಭೇಟಿ ನೀಡಿ ಕಿರುಕುಳ, ಅತಿಥಿ ಶಿಕ್ಷಕರ ಗೌರವ ಧನ ಮಂಜೂರಾತಿಯಲ್ಲೂ ಭ್ರಷ್ಟಾಚಾರ ನಡೆಸಲಾಗಿರುವುದು ಕಂಡುಬಂದಿದೆ.








